ಅಂಕೋಲಾದ ಬೆಳಸೆ (ಹಂದಿಗದ್ದೆ) ಬಳಿ ಕೆಎಸ್‌ಆರ್‌ಟಿಸಿ ಬಸ್-ಟ್ರಕ್ ಭೀಕರ ಡಿಕ್ಕಿ: ಸ್ಥಳದಲ್ಲೇ ಕಂದಮ್ಮ ಸಾವು, ಹಲವರಿಗೆ ಗಾಯ..

News Desk
1 Min Read

ಅಂಕೋಲಾ: ತಾಲೂಕಿನ ಬೆಳಸೆ (ಹಂದಿಗದ್ದೆ) ಸಮೀಪದ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಢಿಕ್ಕಿಯಲ್ಲಿ ಚಿಕ್ಕ ಗಂಡು ಮಗುವೊಂದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಅಂಕೋಲಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕುಮಟಾ ಕಡೆಯಿಂದ ಅಂಕೋಲಾ ಮಾರ್ಗವಾಗಿ ಬರುತ್ತಿದ್ದ ಕೆಎಸ್‌‌ಆರ್‌ಟಿಸಿ ಬಸ್ ಹಾಗೂ ಎದುರುಗಡೆಯಿಂದ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ದುರಂತದ ತೀವ್ರತೆಗೆ ಹಸುಗೂಸೊಂದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ನೆರೆದಿದ್ದವರ ಕರುಳು ಹಿಂಡುವಂತಿತ್ತು. ಘಟನಾ ಸ್ಥಳದಲ್ಲಿ ಮಗುವಿನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಪಘಾತ ಸಂಭವಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸಾರ್ವಜನಿಕರು ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ತುರ್ತು ಚಿಕಿತ್ಸೆ ಒದಗಿಸುತ್ತಿದ್ದಾರೆ.

ವಿಷಯ ತಿಳಿದ ತಕ್ಷಣವೇ ಅಂಕೋಲಾ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಅಪಘಾತಕ್ಕೆ ನಿಖರವಾದ ಕಾರಣವೂ ಸೂಕ್ತ ತನಿಖೆಯಿಂದ ತಿಳಿಯಲಿದೆ..

Share This Article