ಅಂಕೋಲಾ: ಪೂಜಗೇರಿ ಮುಖ್ಯ ರಸ್ತೆಯಲ್ಲಿ ಬಿದ್ದಿರುವ ಬೃಹತ್ ಹೊಂಡಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಈ ಕುರಿತು ಪತ್ರಿಕೆಗಳಲ್ಲಿ ಹಲವು ಬಾರಿ ವರದಿ ಪ್ರಕಟವಾಗಿದ್ದರೂ ಸಂಬಂಧಪಟ್ಟ ಇಲಾಖೆಗಳು ಯಾವುದೇ ತುರ್ತು ಕ್ರಮ ಕೈಗೊಳ್ಳದಿರುವುದು ಜನರ ಜೀವದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೂಜಗೇರಿ ರಸ್ತೆಯು ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗವಾಗಿದೆ. ಇಲ್ಲಿನ ಹೊಂಡಗಳು ವಾಹನ ಸವಾರರಿಗೆ ತೀವ್ರ ತೊಂದರೆ ನೀಡುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಹೊಂಡಗಳಿಂದಾಗಿ ನಿಯಂತ್ರಣ ಕಳೆದುಕೊಂಡು ಬೀಳುವಂತಹ ಘಟನೆಗಳು ಹೆಚ್ಚುತ್ತಿವೆ. ಕಳೆದ ಕೆಲವು ತಿಂಗಳಿಂದ ಈ ರಸ್ತೆ ಹೀನಾಯ ಸ್ಥಿತಿಯಲ್ಲಿದ್ದು, ಮಳೆಗಾಲದಲ್ಲಿ ಹೊಂಡಗಳು ನೀರಿನಿಂದ ತುಂಬಿ ಅಪಾಯದ ಪ್ರಮಾಣ ಇನ್ನಷ್ಟು ಹೆಚ್ಚಿದೆ.
ರಸ್ತೆ ಮಧ್ಯೆ ಇರುವ ಹೊಂಡಗಳಿಂದಾಗಿ ಅಪಘಾತಗಳು ಸಂಭವಿಸುವುದು ಮಾತ್ರವಲ್ಲದೆ, ವಾಹನಗಳ ಆಯಸ್ಸು ಕೂಡ ಕಡಿಮೆ ಯಾಗುತ್ತಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾದ ಇಲಾಖೆಗಳು ಈ ಸಮಸ್ಯೆಯನ್ನು ನಿರ್ಲಕ್ಷಿಸುತ್ತಿರುವುದು ಸಮಂಜಸವಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಪೂಜಗೇರಿ ರಸ್ತೆಯ ಹೊಂಡಗಳನ್ನು ಮುಚ್ಚಲು ತುರ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಪ್ರಾಣ ಮತ್ತು ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ಇದು ಅನಿವಾರ್ಯ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

