ಕುಮಟಾ ಪಟ್ಟಣದಲ್ಲಿ ರಸ್ತೆ ಬದಿ ಮಲಗಿದ್ದ ದನವನ್ನು ಕಾರಿನಲ್ಲಿ ಬಂದು ಕದ್ದೊಯ್ದಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಕುಮಟಾ ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 10, 2026 ರಂದು ಬೆಳಗಿನ ಜಾವ 2:14 ರ ಸುಮಾರಿಗೆ ಕುಮಟಾದ ರೈಸ್ ಮಿಲ್ ಪಕ್ಕದ ರಸ್ತೆಯಲ್ಲಿ ಮಲಗಿದ್ದ ದನವನ್ನು ಬಿಳಿ ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ಕದ್ದೊಯ್ದಿದ್ದರು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್. (BNS) ಕಲಂ 303(2) ಅಡಿಯಲ್ಲಿ (ಗುನ್ನೆ ನಂ: 184/2026) ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆಯು, ಆರೋಪಿಗಳ ಪತ್ತೆಗಾಗಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿತ್ತು. ತನಿಖೆಗಿಳಿದ ತಂಡವು ಬರೋಬ್ಬರಿ 60ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಾಕ್ಷ್ಯಾಧಾರಗಳ ಮೂಲಕ ಆರೋಪಿಗಳ ಜಾಡು ಹಿಡಿದಿದ್ದಾರೆ. ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ತೋಕೂರು ನಿವಾಸಿ ಮಹಮ್ಮದ ಶಬೀರ ಅಲಿಯಾಸ್ ಸಮೀರ (30 ವರ್ಷ) ಎಂಬಾತನನ್ನು ಬಜ್ಪೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು (KA-20/MC 4268) ಜಪ್ತಿ ಮಾಡುವಲ್ಲಿ ತಂಡ ಯಶಸ್ವಿಯಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಮತ್ತು ಭಟ್ಕಳ ಉಪ-ವಿಭಾಗದ ಎಎಸ್ಪಿ ರಾನು ಗುಪ್ತ ಅವರ ಮಾರ್ಗದರ್ಶನದಲ್ಲಿ ಕುಮಟಾ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಖಾದರ್ ಬಾಷಾ, ರವಿ ಗುಡ್ಡಿ, ವಿಠಲ ಮಲವಡಕರ ಹಾಗೂ ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯ್ಕ, ಕಿರಣ ನಾಯ್ಕ ಮತ್ತು ಉಡುಪಿ ಜಿಲ್ಲೆಯ ಅಪರಾಧ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು. ಅತ್ಯಂತ ಚಾಕಚಕ್ಯತೆಯಿಂದ ಪ್ರಕರಣ ಬೇಧಿಸಿದ ತಂಡದ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದಿಸಿದ್ದಾರೆ.
ಹಾಗೂ ಜಾನುವಾರಗಳನ್ನು ಸಾಕಿಕೊಂಡು ಅವುಗಳನ್ನು ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಬಿಟ್ಟು ಬೇಜವಾಬ್ದಾರಿ ತೋರುವ ಮಾಲೀಕರ ಮೇಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯ ವಾಗಿದೆ.


