ಹೊನ್ನಾವರ ತಾಲೂಕಿನ ಕರ್ವ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಗೃಹಲಕ್ಷ್ಮಿ ದಿನಾಚರಣೆ ಆಚರಣೆ..

News Desk
2 Min Read

ಹೊನ್ನಾವರ ತಾಲೂಕಿನ ಕರ್ವ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ಗೃಹಲಕ್ಷ್ಮಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಅತಿಥಿಗಳು ಮತ್ತು ಫಲಾನುಭವಿಗಳು ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ, ಕುಟುಂಬದ ಆರ್ಥಿಕ ಸ್ಥಿರತೆ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉಂಟಾಗಿರುವ ಸಕಾರಾತ್ಮಕ ಪರಿಣಾಮಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರೀಶ್ ನಾಯಕ್ ಅವರು ಮಾತನಾಡಿ, “ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಕುಟುಂಬದ ಆರ್ಥಿಕ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯು ಲಕ್ಷಾಂತರ ಮಹಿಳೆಯರ ಬದುಕಿನಲ್ಲಿ ಆಶಾಕಿರಣವಾಗಿದ್ದು, ಮಹಿಳೆಯರಿಗೆ ಆತ್ಮವಿಶ್ವಾಸವನ್ನು ತುಂಬಿದೆ ಎಂದು ತಿಳಿಸಿದರು. ಮಹಿಳೆಯರ ಕೈಗೆ ನೇರವಾಗಿ ಆರ್ಥಿಕ ನೆರವು ತಲುಪುವುದರಿಂದ ಕುಟುಂಬದ ದೈನಂದಿನ ವೆಚ್ಚ, ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ಮತ್ತು ಸಣ್ಣ ಉಳಿತಾಯಕ್ಕೆ ಸಹಕಾರಿಯಾಗಿದೆ ಜೊತೆಗೆ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಿಸುವಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಪಾತ್ರ ಶ್ಲಾಘನೀಯವಾಗಿದೆ ಎಂದರು”.

ಅಂಗನವಾಡಿ ಮೇಲ್ವಿಚಾರಕರಾದ ವನಿತಾ ದೇಶಭಂಡಾರಿ ಅವರು ಗೃಹಲಕ್ಷ್ಮಿ ದಿನಾಚರಣೆಯ ಮಹತ್ವವನ್ನು ವಿವರಿಸಿ, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಸದುಪಯೋಗವನ್ನು ಪ್ರತಿಯೊಬ್ಬ ಮಹಿಳೆಯೂ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾದ ಅಂಗನವಾಡಿ ಕಾರ್ಯಕರ್ತೆ ಸುಜಾತ ನಾಯ್ಕ ಹಾಗೂ ಅಂಗನವಾಡಿ ಸಹಾಯಕಿ ಸುಜಾತ ನಾಯ್ಕ ಅವರು ಯೋಜನೆಯಿಂದ ತಮ್ಮ ಕುಟುಂಬಕ್ಕೆ ದೊರೆತಿರುವ ಆರ್ಥಿಕ ನೆರವು, ಉಳಿತಾಯದ ಅಭ್ಯಾಸ, ಮಕ್ಕಳ ಅಗತ್ಯಗಳನ್ನು ಪೂರೈಸಲು ದೊರೆತ ಸಹಾಯ ಹಾಗೂ ಕುಟುಂಬದಲ್ಲಿ ಮೂಡಿರುವ ಆತ್ಮವಿಶ್ವಾಸದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಮತ್ತೋರ್ವ ಫಲಾನುಭವಿಯಾದ ಗಣಪಿ ಹಳ್ಳೇರ್ ಅವರು ಗೃಹಲಕ್ಷ್ಮಿ ಯೋಜನೆಯಿಂದ ದೊರೆತ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಅಗತ್ಯಗಳನ್ನು ಪೂರೈಸಿರುವುದಾಗಿ ತಿಳಿಸಿ, ಈ ಯೋಜನೆಯು ಅನೇಕ ಕುಟುಂಬಗಳಿಗೆ ಆರ್ಥಿಕ ಆಸರೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯೆ ನಾಗರತ್ನ ಹಳ್ಳೇರ್ ಎಂಬಿಕೆ ಕವಿತಾ ನಾಯ್ಕ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘಗಳ ಸದಸ್ಯೆಯರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಯಶಸ್ವಿ ಮೂರು ವರ್ಷಗಳ ಪಯಣವನ್ನು ಸ್ಮರಿಸಿ, ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಕೈಗೊಂಡಿರುವ ಇಂತಹ ಜನಪರ ಯೋಜನೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬ ಆಶಯವನ್ನು ವ್ಯಕ್ತಪಡಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗರಾಜ ಅಂಬಿಗ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ, ಆಗಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.

Share This Article