ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನದ ಸರ ಸುಲಿಗೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 20-07-2026 ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ-66ರ ದೊಡ್ಡ ಬಲಸೆ ಕ್ರಾಸ್ ಬಳಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ್ದ ಇಬ್ಬರು ಅಪರಿಚಿತರು, ಅಂದಾಜು 22 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಡಿ (ಗು.ನಂ: 85/2026) ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾದ ಕೂಡಲೇ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಯಿತು. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಟ್ಕಳ ತಾಲೂಕಿನ ಹಲ್ಲಂದಿ ಕಟಗಾರಕೊಪ್ಪದ ನಿವಾಸಿ ಹಾಗೂ ಶೋರೂಮ್ ಉದ್ಯೋಗಿಯಾಗಿರುವ ನಾಗರಾಜ್ ಗಣಪತಿ ಗೊಂಡ ಎಂಬಾತನನ್ನು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ಸುಲಿಗೆ ಮಾಡಿದ್ದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ ಮೊಬೈಲ್ ಹಾಗೂ ಮೋಟಾರ್ ಸೈಕಲ್ ಸೇರಿ ಅಂದಾಜು 3,00,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ದೀಪನ್ ಎಂ.ಎನ್ (ಐಪಿಎಸ್), ಹೆಚ್ಚುವರಿ ಎಸ್ಪಿ ಶ್ರೀ ಕೃಷ್ಣಮೂರ್ತಿ. ಜಿ, ಮತ್ತು ಭಟ್ಕಳ ಡಿವೈಎಸ್ಪಿ ಗಿರೀಶ್ ಬಿ. ಅವರ ಮಾರ್ಗದರ್ಶನದಲ್ಲಿ, ಮುರ್ಡೇಶ್ವರ ಸಿಪಿಐ ಜಗದೀಶ ಹಂಚನಾಳ ಹಾಗೂ ಪಿಎಸ್ಐ ಹಣಮಂತ ಬಿರಾದಾರ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಈ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಲಾಗಿದೆ.


