ಬೆಂಗಳೂರು: ಕೋಣನಕುಂಟೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಕನ್ನಡಪರ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಗೃಹ ಸಚಿವರೊಂದಿಗೆ ಚರ್ಚಿಸಿ ವಾಪಸ್ ಪಡೆಯುವುದಾಗಿ ಮಹತ್ವದ ಭರವಸೆ ನೀಡಿದರು.
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರನ್ನು ವಿಶೇಷವಾಗಿ ಶ್ಲಾಘಿಸಿದ ಅವರು, “ನನ್ನ ಕಷ್ಟದ ದಿನಗಳಲ್ಲಿ ನಾರಾಯಣ ಗೌಡರು ನನಗೆ ದೊಡ್ಡ ಶಕ್ತಿಯಾಗಿ ಗುರುತಿಸಿಕೊಂಡಿದ್ದರು” ಎಂದು ಸ್ಮರಿಸಿದರು. ಇದೇ ವೇಳೆ ಕನ್ನಡಿಗರ ಪರವಾಗಿ ನಾರಾಯಣ ಗೌಡರು ಸಲ್ಲಿಸಿದ ಭಿನ್ನವತ್ತಳೆಗೆ ಸ್ಪಂದಿಸಿದ ಅವರು, ಸಮಗ್ರ ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಪ್ರಥಮ ಸ್ಥಾನ ನೀಡುವ ವಿಚಾರವೂ ಸೇರಿದಂತೆ ಹಲವು ಪ್ರಮುಖ ಅಂಶಗಳ ಕುರಿತು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇದೇ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ, ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಗುರು ಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಗಣ್ಯರಾದ ಯು.ಟಿ. ಖಾದರ್, ಚಲುವರಾಯಸ್ವಾಮಿ, ಶಿವಲಿಂಗೇಗೌಡ, ಬಿಡಿಎ ಅಧ್ಯಕ್ಷ ಹ್ಯಾರಿಸ್ ಮತ್ತು ಹಿರಿಯ ವಿದ್ವಾಂಸ ಹಂಪ ಬೋರಲಿಂಗಯ್ಯ ಉಪಸ್ಥಿತರಿದ್ದರು. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ರಾಜ್ಯ ಉಪಾಧ್ಯಕ್ಷ ಡಾ. ಪಿ. ಅಂಜನಪ್ಪ, ಸಂಘಟನಾ ಕಾರ್ಯದರ್ಶಿ ಅಬ್ಬಿಗೇರಿ ವಿನೋದ್, ಬೆಂಗಳೂರು ಮಹಾನಗರ ಅಧ್ಯಕ್ಷ ಧರ್ಮರಾಜ್ ಹಾಗೂ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅರುಣ್ ಹರಕಡೆ, ಉಪಾಧ್ಯಕ್ಷ ವಿನಾಯಕ ನಾಯಕ, ಯುವ ಘಟಕದ ಅಧ್ಯಕ್ಷ ಮಂಜುನಾಥ ನಾಯಕ, ಪ್ರಧಾನ ಕಾರ್ಯದರ್ಶಿ ಗಣಪತಿ ನಾಯ್ಕ ಮತ್ತು ಸಾಮಾಜಿಕ ಜಾಲತಾಣದ ಮುಖ್ಯ ಸಂಚಾಲಕ ಶ್ರೀಕಾಂತ್ ಪಟಗಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.


