ಕಾರವಾರ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರ ಬಿಣಗಾ ಮಾರ್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಹೆದ್ದಾರಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರ ನೋಂದಣಿಯ (MH 15 KG 4891) ಕಾರಿಗೆ ಭಾರಿ ಗಾತ್ರದ ಕಂಟೈನರ್‌ವೊಂದು ದಿಢೀರನೆ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಕಂಟೈನರ್, ನೇರವಾಗಿ ಕಾರಿನ ಮೇಲೆಯೇ ಉರುಳಿ ಬಿದ್ದಿದೆ.
ಬೃಹತ್ ವಾಹನದ ಭಾರಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನೊಳಗಿದ್ದ ಎಂಟು ವರ್ಷದ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಕಂಟೈನರ್ ಚಾಲಕನ ಅಜಾಗರೂಕತೆ ಹಾಗೂ ಅತಿರೇಕದ ಚಾಲನೆಯೇ ಕಾರಣ ಎಂಬ ಆರೋಪಗಳು ಸ್ಥಳೀಯರಿಂದ ವ್ಯಕ್ತವಾಗಿವೆ.
ಈ ಭೀಕರ ದುರಂತದಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬಳಿಕ ಸ್ಥಳಕ್ಕೆ ಪೊಲೀಸರು ಬಂದು ರಕ್ಷಣಾ ಕಾರ್ಯ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
ವಿಕಾಸ ವಾಹಿನಿ ವರದಿ

