ರಾಜ್ಯದಲ್ಲಿ ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ನಡೆಸುವಂತಿಲ್ಲ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯು ಆದೇಶ ಹೊರಡಿಸಿದೆ. ಗೃಹರಕ್ಷಕ ದಳ (ಹೋಂಗಾರ್ಡ್ಸ್), ಸಶಸ್ತ್ರ ಮೀಸಲು ಪೊಲೀಸ್ ಹಾಗೂ ಎಎಸ್ಐ (ASI) ಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ವಾಹನ ತಪಾಸಣೆಯ ನೆಪದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸ್ಐ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ವರ್ತಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ, ಸರ್ಕಾರಿ ವಾಹನಗಳನ್ನು ಬಳಸಿಕೊಂಡು ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಗಟ್ಟುವುದು, ಸಾರ್ವಜನಿಕರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಹೆದರಿಸುವುದು ಮತ್ತು ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಕೃತ್ಯಗಳು ಮಿತಿಮೀರಿದ್ದವು.

ಇದರಿಂದ ವಾಹನ ಸವಾರರು ತೀವ್ರ ಕಿರುಕುಳ ಅನುಭವಿಸು ವಂತಾಗಿತ್ತು. ಪೊಲೀಸರ ಈ ಅನಧಿಕೃತ ಚಟುವಟಿಕೆಗಳು ಹಾಗೂ ಸಾರ್ವಜನಿಕರ ಮೇಲಿನ ದೌರ್ಜನ್ಯವನ್ನು ‘ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ’ ಗಂಭೀರವಾಗಿ ಪರಿಗಣಿಸಿತ್ತು. ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು, ಇಂತಹ ಕೃತ್ಯಗಳಿಗೆ ಕೂಡಲೇ ಕಡಿವಾಣ ಹಾಕುವಂತೆ ಆಗ್ರಹಿಸಿ ಹಾಗೂ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ರಾಜ್ಯದ ಡಿಜಿ ಮತ್ತು ಐಜಿಪಿ (DG & IGP) ಅವರಿಗೆ ಪತ್ರ ಬರೆದಿದ್ದರು.
ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಪ್ರಧಾನ ಕಚೇರಿಯು ಎಚ್ಚೆತ್ತುಕೊಂಡು ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಮಹತ್ವದ ಆದೇಶ ರವಾನಿಸಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಇಲಾಖೆಯ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ, ಆಯಾ ಠಾಣಾ ವ್ಯಾಪ್ತಿಯಲ್ಲಿ ನಿಯಮ ಮೀರಿ ವಾಹನ ತಪಾಸಣೆ ಮಾಡುವ ಹಾಗೂ ಅನಧಿಕೃತ ಚಟುವಟಿಕೆಗಳಲ್ಲಿ ತೊಡಗುವ ಸಿಬ್ಬಂದಿಯ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ತಪ್ಪು ಸಾಬೀತಾದಲ್ಲಿ ಅಂತಹ ಸಿಬ್ಬಂದಿಯ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಹಿರಿಯ ಅಧಿಕಾರಿಗಳಿಲ್ಲದೆ ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟದಂತೆ ಎಲ್ಲಾ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡುವಂತೆಯೂ ಇಲಾಖೆ ಸೂಚಿಸಿದೆ.
ವಿಕಾಸ ವಾಹಿನಿ ವರದಿ

